Top

ಮಹಾರಾಷ್ಟ್ರ ಸಿಎಂ ಉದ್ಧವ್​ ಠಾಕ್ರೆ ಹೇಳಿಕೆಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿ

ಕನ್ನಡಿಗರು ಶಾಂತಿಪ್ರಿಯರು, ಸಹನಶೀಲರು, ಸಹಬಾಳ್ವೆಯಲ್ಲಿ ನಂಬಿಕೆ ಇಟ್ಟವರು. ನಮ್ಮ ಸಜ್ಜನಿಕೆಯನ್ನು ದೌರ್ಬಲ್ಯ ಎಂದು ತಿಳಿಯಬೇಡಿ

ಮಹಾರಾಷ್ಟ್ರ ಸಿಎಂ ಉದ್ಧವ್​ ಠಾಕ್ರೆ ಹೇಳಿಕೆಗೆ  ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿ
X

ಬೆಂಗಳೂರು: ನಮ್ಮ ಬೆಳಗಾವಿ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ನೀಡಿರುವ ಅಧಿಕಪ್ರಸಂಗತನದ ಹೇಳಿಕೆ ಖಂಡನೀಯ ಎಂದು ಪ್ರತಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಇಂದು ತಮ್ಮ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಬೆಳಗಾವಿ ಕರ್ನಾಟಕ ರಾಜ್ಯದ ಅವಿಭಾಜ್ಯ ಅಂಗ. ಇತ್ಯರ್ಥವಾಗಿರುವ ವಿಷಯವನ್ನು ಕೆಣಕಲು‌ ಬರಬೇಡಿ. ಬೆಳಗಾವಿ ನಮ್ಮದು ಎಂದು ತಿರುಗೇಟು ನೀಡಿದ್ದಾರೆ.

ಬೆಳಗಾವಿ ಗಡಿ ಬಗ್ಗೆ ಮಹಾಜನ ವರದಿಯೇ ಅಂತಿಮ. ಉದ್ಧವ್​ ಠಾಕ್ರೆ ಅವರೇ, ಇತ್ಯರ್ಥವಾಗಿರುವ ವಿಷಯವನ್ನುವ ಕೆಣಕಿ ರಾಜಕೀಯ ಮಾಡಲು ಹೋಗಬೇಡಿ. ಈಗ ನೀವು ಕೇವಲ ಶಿವಸೈನಿಕ ಅಲ್ಲ, ಜವಾಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯಮಂತ್ರಿ ಎನ್ನುವುದನ್ನು ಮರೆಯಬೇಡಿ ಎಂದಿದ್ದಾರೆ.

ಕರ್ನಾಟಕದ ನೆಲ-ಜಲ-ಭಾಷೆಯ ರಕ್ಷಣೆ ನಮ್ಮೆಲ್ಲರ ಕರ್ತವ್ಯ. ಈ ಬಗ್ಗೆ ರಾಜಿಯೂ ಇಲ್ಲ, ರಾಜಕೀಯವೂ ಇಲ್ಲ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ಅವರ ಉದ್ಧಟತನದ ಹೇಳಿಕೆಗೆ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು, ಅಧಿಕೃತವಾಗಿ ತಕ್ಕ ಪ್ರತ್ಯುತ್ತರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ಅವರೇ, ಕನ್ನಡಿಗರು ಶಾಂತಿಪ್ರಿಯರು, ಸಹನಶೀಲರು, ಸಹಬಾಳ್ವೆಯಲ್ಲಿ ನಂಬಿಕೆ ಇಟ್ಟವರು. ನಮ್ಮ ಸಜ್ಜನಿಕೆಯನ್ನು ದೌರ್ಬಲ್ಯ ಎಂದು ತಿಳಿಯಬೇಡಿ ಎಂದು ಸಿದ್ದರಾಮಯ್ಯ ಅವರು ಕಿಡಿಕಾರಿದ್ದಾರೆ.

ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಮರಾಠಿ ಭಾಷೆ ಮತ್ತು ಸಂಸ್ಕೃತಿ ಪ್ರಧಾನ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುತ್ತೇವೆ ಎಂದು ಹೇಳಿದ್ದರು.

Next Story

RELATED STORIES