Tuesday, August 16, 2022

ಬಿಜೆಪಿ ಸರ್ಕಾರ ತನ್ನತನವನ್ನು ಅಡವಿಟ್ಟು‌ ಹಿಂದಿ ಭಾಷೆಗೆ ಸಂಪೂರ್ಣ ಶರಣಾಗತವಾಗಿದೆ: ಸಿದ್ದು ಕಿಡಿ

Must read

ಬೆಂಗಳೂರು: ರಾಜ್ಯದ ಬಸವರಾಜ ಬೊಮ್ಮಾಯಿ ಸರ್ಕಾರ ಕೇಂದ್ರ ಬಿಜೆಪಿ ನಾಯಕರ ಓಲೈಕೆಗಾಗಿ ಮತ್ತೆ ಮತ್ತೆ ಕನ್ನಡವನ್ನು ತುಳಿದು ಹಿಂದಿಯನ್ನು ಮೆರೆಸಿ‌‌ ಕನ್ನಡ-ಕನ್ನಡಿಗ-ಕರ್ನಾಟಕಕ್ಕೆ ಅವಮಾನ ಮಾಡುತ್ತಿರುವುದು ಖಂಡನೀಯ ಎಂದು ವಿಪಕ್ಷನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್​ ಮಾಡಿರುವ ಅವರು, ಕೇಂದ್ರ ಸಚಿವ ಅಮಿತ್​ ಶಾ ಅವರು ಭಾಗವಹಿಸಿದ್ದ ‘ ಸಂಕಲ್ಪ್ ಸೆ ಸಿದ್ಧಿ’ ಎಂಬ ಕಾರ್ಯಕ್ರಮದ ಬ್ಯಾನರ್ ಸಂಪೂರ್ಣ ಹಿಂದಿಮಯವಾಗಿತ್ತು.‌ ಇನ್ನೊಂದೆಡೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತನ್ನ ಜಾಲತಾಣದಲ್ಲಿ ಹಿಂದಿಯ ಕಿರೀಟ ಇಟ್ಟುಕೊಂಡು ಮೆರೆಸುತ್ತಿದೆ. ರಾಜ್ಯದ ಬಿಜೆಪಿ ಸರ್ಕಾರ ತನ್ನತನವನ್ನು ಅಡವಿಟ್ಟು‌ ಹಿಂದಿ ಭಾಷೆಗೆ ಸಂಪೂರ್ಣ ಶರಣಾಗತವಾಗಿದೆ ಎಂಬುದಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಾಲತಾಣವೇ ಸಾಕ್ಷಿ. ಮೊದಲು ಈ ಜಾಲತಾಣದಿಂದ ಹಿಂದಿಯನ್ನು ಕಿತ್ತೊಗೆದು, ಕನ್ನಡಿಗರ ಸ್ವಾಭಿಮಾನ ಉಳಿಸಿ.

ರಾಜ್ಯದಲ್ಲಿರುವುದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯೇ? ಅಥವಾ ಹಿಂದಿ‌ ಮತ್ತು ಸಂಸ್ಕೃತಿ ಇಲಾಖೆಯೇ? ಎನ್ನುವುದನ್ನು ಬಸವರಾಜ ಬೊಮ್ಮಾಯಿ ಅವರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಕಾರ್ಕಳ ಸುನೀಲ್​ ಅವರು ಸ್ಪಷ್ಟಪಡಿಸಬೇಕು. ಕನ್ನಡ ಮತ್ತು ಸಂಸ್ಕೃತಿಯ ರಕ್ಷಣೆ ಮತ್ತು‌ ಪೋಷಣೆಗಾಗಿ ಇರುವ ಇಲಾಖೆಯೇ ಎರಡು ಸಾವಿರ ವರ್ಷಗಳ ಇತಿಹಾಸವಿರುವ ಕನ್ನಡವನ್ನು ಹೊರಗಿಟ್ಟು ಹಿಂದಿ ಭಾಷೆಯ ಪ್ರಚಾರಕ್ಕೆ ಇಳಿದರೆ ಕನ್ನಡ ಭಾಷೆಯನ್ನು ರಕ್ಷಿಸಿವವರು ಯಾರು ಕಾರ್ಕಳ ಸುನೀಲ್?

ಅಧಿಕಾರ ಉಳಿಸಿಕೊಳ್ಳುವ ಸಲುವಾಗಿ ಕನ್ನಡಿಗರ ಸ್ವಾಭಿಮಾನವನ್ನು ‘ಉತ್ತರ ಕುಮಾರ’ರ ಕಾಲಡಿ ಯಾಕೆ ಅಡವು ಇಡುತ್ತೀರಾ? ಶರಣಾಗತಿ ಕನ್ನಡದ ಮಣ್ಣಿನ ಗುಣವಲ್ಲ, ವೀರರಾಣಿ ಅಬ್ಬಕ್ಕನ ನೆಲದಿಂದ ಬಂದ ಕನ್ನಡ ಮತ್ತು ಸಂಸ್ಕೃತಿ ಸಚಿವ ಕಾರ್ಕಳ ಸುನೀಲ್ ಅವರಿಗೆ ಇಂಥಾ ಗುಲಾಮಿ‌ ಮನಸ್ಥಿತಿ ಬರಬಾರದಿತ್ತು ಎಂದಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ ಶಾ ಅವರು ಬುಧವಾರ ಬೆಂಗಳೂರಿನಲ್ಲಿ ಕೇಂದ್ರ ಸಂಸ್ಕೃತಿ ಸಚಿವಾಲಯ, ಸಿಐಐ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಸಂಕಲ್ಪದಿಂದ ಸಿದ್ಧಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ಅಮಿತ್ ಶಾ ಕನ್ನಡ ಬಳಕೆ ಮಾಡದಿರುವುದಕ್ಕೆ ಸರಣಿ ಟ್ವೀಟ್ ಮಾಡುವ ಮೂಲಕ ಸಿದ್ದರಾಮಯ್ಯ ಅವರು ಆಕ್ರೋಶ ಹೊರಹಾಕಿದ್ದಾರೆ.

Also read:  ಹುಬ್ಬಳ್ಳಿ: ವಿಷ ಸೇವಿಸಿ ಸಾವಿಗೆ ಶರಣಾದ ಯುವ ಪ್ರೇಮಿಗಳು

 

 

 

Latest article