ಯಾದಗಿರಿ: ಜಿಲ್ಲೆಯ ಗುರಮಿಠಕಲ್ ತಾಲೂಕಿನ ಅರಕೇರಾ (ಕೆ) ಬಳಿ ನಿನ್ನೆ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಆರು ಜನ ಸಾವನ್ನಪ್ಪಿದ್ದಾರೆ.
ಕಾರು ಮತ್ತು ಲಾರಿ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಹಾಗೂ ಆಸ್ಪತ್ರೆಯಲ್ಲಿ ಮೂವರು ಮೃತಪಟ್ಟಿದ್ದಾರೆ. ಗಂಭೀರ ಗಾಯಗೊಂಡ ಬಾಲಕನೋರ್ವನನ್ನು ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರೆಲ್ಲರು ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹಟ್ಟಿ ಗ್ರಾಮದವರಾಗಿದ್ದು, ತೆಲಂಗಾಣದ ಕೊಡಂಗಲ್ ಸಮೀಪದ ದರ್ಗಾಕ್ಕೆ ತೆರಳಿದ್ದರು. ದರ್ಗಾದಲ್ಲಿ ಜವಳ ಕಾರ್ಯಕ್ರಮ ಹಾಗೂ ಪೂಜೆ ಸಲ್ಲಿಸಿ, ಹಟ್ಟಿ ಗ್ರಾಮಕ್ಕೆ ವಾಪಸ್ ಬರುತ್ತಿರುವಾಗ ಘಟನೆ ನಡೆದಿದೆ.
ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಯಾದಗಿರಿ ಎಸ್ಪಿ ಡಾ.ಸಿ.ಬಿ.ವೇದಮೂರ್ತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗುರುಮಿಠಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.