ಮಧ್ಯಪ್ರದೇಶದ ಜಬಲಪುರದ ನ್ಯೂ ಲೈಫ್ ಮಲ್ಟಿಸ್ಪೆಷಾಲಿಟಿ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅವಘಡದಲ್ಲಿ 10 ಮಂದಿ ಸಜೀವ ದಹನವಾಗಿದ್ದಾರೆ.
ಮೂರು ಅಂತಸ್ತಿನ ಕಟ್ಟಡದಲ್ಲಿ ಕಾಣಿಸಿಕೊಂಡ ಬೆಂಕಿ ನೋಡ-ನೋಡುತ್ತಿದ್ದಂತೆ ಇಡೀ ಕಟ್ಟಡವನ್ನೇ ಆವರಿಸಿತ್ತು. ಘಟನೆಯಲ್ಲಿ 10 ಜನ ಸಜೀವ ದಹನವಾಗಿದ್ದು, 13ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಜೊತೆಗೆ ಇನ್ನೂ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಬಲಪುರ ಎಸ್ಪಿ ಅಖಿಲೇಶ್ ಗೌರ್ ಮಾಹಿತಿ ನೀಡಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ ಶಾರ್ಟ್ ಸರ್ಕ್ಯೂಟ್ನಿಂದ ಈ ದುರಂತ ನಡೆದಿದೆ ಎಂದು ಅಖಿಲೇಶ್ ತಿಳಿಸಿದ್ದಾರೆ.
ಇನ್ನ ಘಟನಾ ಸ್ಥಳಕ್ಕೆ ಜಬಲಪುರ ಮೇಯರ್ ಜಗತ್ ಬಹದೂರ್ ಸಿಂಗ್ ಭೇಟಿ ನೀಡಿ ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ಪಡೆದಿದ್ದಾರೆ. ಜೊತೆಗೆ ತ್ವರಿತವಾಗಿ ಇನ್ನುಳಿದವರನ್ನು ರಕ್ಷಣೆ ಮಾಡಿ, ಸೂಕ್ತ ಚಿಕಿತ್ಸೆ ನೀಡುವುದಕ್ಕೆ ಬೇರೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.