ಬೆಂಗಳೂರು: ಮೇಕೆದಾಟು ಪಾದಯಾತ್ರೆ ಪ್ರಶ್ನಿಸಿ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಡೆಸಿದ ಹೈಕೋರ್ಟ್, ಕೆಪಿಸಿಸಿ ಹಾಗೂ ರಾಜ್ಯಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಾದಯಾತ್ರೆಗೆ ಇಂದೇ ಬ್ರೇಕ್ ಬೀಳುವ ಸಾಧ್ಯತೆಯಿದೆ.
ಮೇಕೆದಾಟು ಯೋಜನೆ ಜಾರಿಗಾಗಿ ಕಾಂಗ್ರೆಸ್ ಪಾದಯಾತ್ರೆ ನಡೆಸುತ್ತಿದೆ. ಇದನ್ನು ಪ್ರಶ್ನಿಸಿ ಹೈಕೋರ್ಟ್ಗೆ ಪಿಐಎಲ್ ಸಲ್ಲಿಸಲಾಗಿತ್ತು. ಇದರ ವಿಚಾರಣೆ ನಡೆಸಿದ ಪೀಠ, ಪಾದಯಾತ್ರೆ ನಡೆಸುವವರ ಮೇಲೆ ಈಗಾಗಗಲೇ ಮೂರು ಎಫ್ಐಆರ್ ದಾಖಲಿಸಿರುವುದಾಗಿ ಎಎಜಿ ಮಾಹಿತಿ ನೀಡಿದೆ. ಸರ್ಕಾರ ರ್ಯಾಲಿ ತಡೆಯಲು ಅಸಮರ್ಥವಾಗಿದೆಯೇ? ಅನುಮತಿ ಕೊಟ್ಟಿಲ್ಲದಿದ್ದರೆ ಯಾರಿಗಾಗಿ ಕಾಯುತ್ತಿದ್ದೀರಿ? ಸರ್ಕಾರ ಸಂಪೂರ್ಣ ಅಸಮರ್ಥವಾಗಿದೆಯೇ. ಸಾರ್ವಜನಿಕ ಹಿತಾಸಕ್ತಿಗೆ ವಿರುದ್ದವಿದ್ದರೂ ಯಾಕೆ ಕ್ರಮ ಕೈಗೊಂಡಿಲ್ಲ. ಹೈಕೋರ್ಟ್ ಆದೇಶದವರೆಗೆ ನೀವು ಕ್ರಮ ಕೈಗೊಳ್ಳುವುದಿಲ್ಲವೇ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತರಾಟೆ ತೆಗೆದುಕೊಂಡಿದೆ.
ಈ ಹಿನ್ನೆಲೆಯಲ್ಲಿ ರಾಮನಗರದಲ್ಲೇ ಪಾದಯಾತ್ರೆ ತಡೆಯಲು ಸರ್ಕಾರ ಚಿಂತನೆ ನಡೆಸಿದೆ. ಜೊತೆಗೆ ಪೊಲೀಸರ ಮೂಲಕ ಕೈ ನಾಯಕರ ಬಂಧನಕ್ಕೆ ಮುಂದಾಗಿದೆ. ಇದೇ ಕಾರಣಕ್ಕಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿಕಾಸಸೌಧದಲ್ಲಿ ಹಿರಿಯ ಅಧಿಕಾರಿಗಳ ಜೊತೆ ತರಾತುರಿಯಲ್ಲಿ ಸಭೆ ನಡೆಸಿದ್ದಾರೆ.